ಬೆಂಗಳೂರು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತೇನೆ, ಕಾಂಗ್ರೆಸ್ ಪಕ್ಷ ನನ್ನನ್ನು ಮೇಯರ್ ಆಗಿ ಆಯ್ಕೆ ಮಾಡಿದ್ದು, ಆ ನಂಬಿಕೆಯನ್ನು ಉಳಿಸಿಕೊಂಡು ಪಕ್ಷ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರುತ್ತೇನೆ ಎಂದು ನೂತನ ಮೇಯರ್ ಸಂಪತ್‍ರಾಜ್ ಹೇಳಿದರು. ಮೇಯರ್ ಆಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ಬಿಬಿಎಂಪಿ ಸದಸ್ಯನಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ಈ ಜವಾಬ್ದಾರಿ ನೀಡಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ವಿಶ್ವಮಾನ್ಯಗೊಂಡಿರುವ ಬೆಂಗಳೂರನ್ನು ಅಭಿವೃದ್ಧಿಗೊಳಿಸಲು ನಮ್ಮ ಮೊದಲ ಆದ್ಯತೆ. ಮೂಲಭೂತ ಸೌಕರ್ಯಗಳನ್ನು ಒದಗಿಸುವುದು, ಜನರ ಸಮಸ್ಯೆಗಳನ್ನು ಬಗೆಹರಿಸುವುದು, ಜನರಿಗೆ ಗುಣಮಟ್ಟದ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಮಳೆಗಾಲದಲ್ಲಿ ಆಗುವ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಪತ್‍ರಾಜ್ ತಿಳಿಸಿದರು.
ಸಮಯ ವ್ಯರ್ಥ ಮಾಡದೆ ಇಂದಿನಿಂದಲೇ ಕಾರ್ಯೋನ್ಮುರಾಗುವುದಾಗಿ ಅವರು ಹೇಳಿದರು. ನಾಡಪ್ರಭು ಕೆಂಪೇಗೌಡರ ಕನಸಿನ ಬೆಂಗಳೂರನ್ನು ನನಸಾಗಿಸಲು ತಮ್ಮೆಲ್ಲರ ಸಹಕಾರ, ಸಲಹೆ ಅತ್ಯಗತ್ಯ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಸೂಚಿಯನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲು ಪಾಲಿಕೆಯಲ್ಲಿ ನೂರಕ್ಕೆ ನೂರರಷ್ಟು ಕನ್ನಡ ಬಳಕೆಗೆ ಆದ್ಯತೆ ನೀಡಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ ಎಂದರು. ನಮ್ಮ ಮುಂದೆ ಸಮಸ್ಯೆಗಳಿವೆ, ಸವಾಲುಗಳಿವೆ. ಪಕ್ಷ ಸಂಘಟನೆಯ ಜವಾಬ್ದಾರಿ ಇದೆ. ಚುನಾವಣೆ ವರ್ಷವಾಗಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ನಾವು ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು
No comments:
Post a Comment