Wednesday, 4 October 2017

ಜೆಡಿಎಸ್ ನ ಶಕ್ತಿ ಪ್ರದರ್ಶನ ನಾಳೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ನಾಳೆ ಅರಮನೆ ಮೈದಾನದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆಸಲಿದೆ. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜೆಡಿಎಸ್ ಕಟ್ಟಡಕ್ಕೆ ನಾಳೆ ಅಧಿಕೃತವಾಗಿ ಲೋಕನಾಯಕ ಜಯಪ್ರಕಾಶ್ ನಾರಾಯಣ ಭವನ (ಜೆಪಿಭವನ) ಎಂದು ನಾಮಕರಣ ಮಾಡಲಾಗುತ್ತದೆ.  ಇದೇ ಸಂದರ್ಭದಲ್ಲಿ ಸ್ವಾಭಿಮಾನಿ ಸಮಾನತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯಾದ್ಯಂತ ಪಕ್ಷದ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಸಚಿವರು ಸೇರಿದಂತೆ ಲಕ್ಷಾಂತರ ಕಾರ್ಯಕರ್ತರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ.


ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಉದ್ಘಾಟಿಸಲಿದ್ದು, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪಕ್ಷದ ಸಂಸದರು, ಶಾಸಕರು ಸೇರಿದಂತೆ ಎಲ್ಲಾ ಮುಖಂಡರು ಹಾಗೂ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.  ಕಳೆದ ವಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ಜೆಡಿಎಸ್ ಕಚೇರಿಯಲ್ಲಿ ಪೂಜೆ ನೆರವೇರಿಸಲಾಗಿತ್ತು. ನಾಳೆ ವಿಧ್ಯುಕ್ತವಾಗಿ ಜೆಪಿ ಭವನ ಎಂದು ನಾಮಕರಣ ಮಾಡುವ ಮೂಲಕ ಕಚೇರಿ ಪ್ರವೇಶವನ್ನು ಮಾಡಲಾಗುತ್ತದೆ. ಅರಮನೆ ಮೈದಾನದ ಬೃಹತ್ ವೇದಿಕೆಯಲ್ಲಿ ಸಮಾವೇಶ ನಡೆಯಲಿದ್ದು, ಈಗಾಗಲೇ ಸಿದ್ದತಾ ಕಾರ್ಯಗಳು ಭರದಿಂದ ಸಾಗಿವೆ. ನಾಡಿನ ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಪಕ್ಷದ ಕಾರ್ಯಕರ್ತರಿಗೆ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಗ್ರಾಪಂ, ತಾಪಂ, ಜಿಪಂ, ಪಪಂ ಸದಸ್ಯರಿಂದ ಹಿಡಿದು ಶಾಸಕರು, ಸಂಸದರವರೆಗೆ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.


ಸಮಾವೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಬೇಕಾದ ಕಾರ್ಯತಂತ್ರದ ಬಗ್ಗೆ ಕಾರ್ಯಕರ್ತರಿಗೆ ಸಲಹೆ ನೀಡಲಾಗುತ್ತದೆ. ಈಗಿನಿಂದಲೇ ಚುನಾವಣಾ ಸಿದ್ದತೆಯಲ್ಲಿ ತೊಡಗಿಕೊಂಡು ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮಾಡುವುದರ ಜತೆಗೆ ಎಲ್ಲಾ ಹಂತದಲ್ಲೂ ಪಕ್ಷದಲ್ಲಿ ಶಿಸ್ತು ಕಾಪಾಡಿಕೊಳ್ಳಲು ವರಿಷ್ಠರು ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜತೆಗೆ ರಾಜ್ಯದಲ್ಲಿ ಜನರು ಎದುರಿಸುತ್ತಿರುವ ಬರ, ಕುಡಿಯುವ ನೀರು ಮತ್ತಿತರ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಹೋರಾಟ ನಡೆಸುವ ಬಗ್ಗೆಯೂ ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಒಟ್ಟಾರೆ ನಾಳೆ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯವಾಗಿ ಸಂದೇಶವೊಂದನ್ನು ರವಾನಿಸುವ ಉದ್ದೇಶವನ್ನು ಹೊಂದಲಾಗಿದೆ.


No comments:

Post a Comment